ಬೆಂಗಳೂರು
2026ರ ಜನವರಿವರೆಗೆ ಧಾರವಾಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದೆ.
ಕಾಡಸಿದ್ದೇಶ್ವರ ಸ್ವಾಮೀಜಿ ಪರ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿದರು.
ಈ ಹಿಂದೆ ವಿಜಯಪುರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಕಲಬುರಗಿ ಪೀಠ ಎತ್ತಿ ಹಿಡಿದಿತ್ತು. ಈ ಆದೇಶವನ್ನು ಸುಪ್ರೀಂಕೋರ್ಟ್ ಸಹ ಖಾಯಂಗೊಳಿಸಿದ್ದರಿಂದ ಸ್ವಾಮೀಜಿಗೆ ತೀವ್ರ ಹಿನ್ನಡೆಯಾಗಿತ್ತು.
ವಿಜಯಪುರ ಜಿಲ್ಲೆಗೆ ನಿರ್ಬಂಧ ಬಿದ್ದ ಬೆನ್ನಲ್ಲೇ ಕನ್ನೇರಿ ಸ್ವಾಮಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅಕ್ಟೊಬರ್ 17 ಅವರ ಅರ್ಜಿಯನ್ನು ಕಲಬುರ್ಗಿ ಪೀಠದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ಏಕಸದಸ್ಯ ಪೀಠವು ವಜಾಗೊಳಿಸಿತು.
ತಮ್ಮ ತೀರ್ಪಿನಲ್ಲಿ ನ್ಯಾಯಮೂರ್ತಿಗಳು “ಕೋರ್ಟಿನ ಮುಂದಿರುವ ದಾಖಲೆಗಳು ಅರ್ಜಿದಾರರು (ಕನ್ನೇರಿ ಸ್ವಾಮಿ) ನಿಂದನೀಯ ಮತ್ತು ಅವಹೇಳನಕಾರಿ ಭಾಷೆಯ ಬಳಸಿರುವುದನ್ನು ತೋರಿಸುತ್ತದೆ. ಸಮಾಜದಲ್ಲಿ ಪೂಜ್ಯ ಸ್ಥಾನವಿರುವ ಯಾವುದೇ ವ್ಯಕ್ತಿಗೆ ಇದು ಯೋಗ್ಯ ಭಾಷೆಯಲ್ಲ. ಇದು ಅವರ ಪದವಿಗಿರುವ ಘನತೆಯನ್ನು ಕುಗ್ಗಿಸುತ್ತದೆ,” ಕನ್ನೇರಿ ಸ್ವಾಮಿಗೆ ಛಿಮಾರಿ ಹಾಕಿದ್ದರು.
ಹೈಕೋರ್ಟ್ ತೀರ್ಪಿನ ವಿರುದ್ಧ ಕನ್ನೇರಿ ಸ್ವಾಮಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಅಕ್ಟೊಬರ್ 29 ವಜಾಗೊಳಿಸಿತು. ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ವರಾಲೆ ಹೈಕೋರ್ಟ್ ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
“ಒಬ್ಬ ಸ್ವಾಮೀಜಿ ಈ ರೀತಿ ಕೀಳುಮಟ್ಟದ ಹೇಳಿಕೆ ನೀಡಿದ್ದು ಸರಿಯಲ್ಲ. ನೀವು ಒಳ್ಳೆಯ ಪ್ರಜೆಯಲ್ಲ. ನೀವು ಸ್ವಾಮೀಜಿಯಾಗಿ ಗಂಭೀರವಾಗಿರಬೇಕು. ಅವಹೇಳನಕಾರಿ ಭಾಷೆ ಬಳಸಿದ್ದೀರಿ. ನೀವು ಮಾತನಾಡುವುದು ನಿಲ್ಲಿಸಿ ಮೌನವಾಗಿ ಬೇರೆ ಮಠದಲ್ಲಿ ಧ್ಯಾನ ಮಾಡಿ,” ಎಂದು ನ್ಯಾಯಮೂರ್ತಿಗಳು ಎಚ್ಚರಿಸಿದರು.
ಜೊತೆಗೆ ಕನ್ನೇರಿ ಸ್ವಾಮಿಯ ವಿರುದ್ಧ ಬೆಂಗಳೂರಿನ ನ್ಯಾಯಾಲಯದಲ್ಲಿ ಲಿಂಗಾಯತ ಮಠಾಧೀಶರ ಒಕ್ಕೂಟ ಒಂದು ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ಹೂಡಿದೆ.
ತಮ್ಮ ಮಧ್ಯಂತರ ಆದೇಶದಲ್ಲಿ ನ್ಯಾಯಾಧೀಶರು ಲಿಂಗಾಯತ ಸ್ವಾಮೀಜಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕನ್ನೇರಿ ಸ್ವಾಮಿಗೆ ನಿರ್ಬಂಧಕಾಜ್ಞೆ ವಿಧಿಸಿದ್ದಾರೆ.
