100 ಎಕರೆ ಪ್ರದೇಶದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ
ದಾವಣಗೆರೆ
ಇತ್ತೀಚೆಗೆ ಲಿಂಗೈಕ್ಯರಾದ ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮವನ್ನು ಆನೆಕೊಂಡದ ಕಲ್ಲೇಶ್ವರ ರೈಸ್ಮಿಲ್ ಸಮೀಪದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದೆ. 100 ಎಕರೆ ಪ್ರದೇಶದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆಗಳು ಮುಗಿದಿವೆ.
ಈ ಕುರಿತು ಪುತ್ರ ಹಾಗು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಮಾಹಿತಿ ನೀಡಿದ್ದಾರೆ.
ನುಡಿನಮನ ಕಾರ್ಯಕ್ರಮಕ್ಕಾಗಿ ಮೂರು ಬೃಹತ್ ವೇದಿಕೆಗಳನ್ನು ಸಿದ್ಧಪಡಿಸಲಾಗಿದೆ. ಸ್ವಾಮೀಜಿಗಳು, ಸಿಎಂ, ಡಿಸಿಎಂ, ರಾಜಕೀಯ ನಾಯಕರು ಹಾಗು ಶಾಮನೂರು ಶಿವಶಂಕರಪ್ಪನವರ ಕುಟುಂಬಸ್ಥರು ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 10.15ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾ.ಶಾಮನೂರು ಶಿವಶಂಕರಪ್ಪನವರು ನಡೆದು ಬಂದ ದಾರಿಯ ‘ಅಮೃತ ಪುರುಷ’ ಸಾಕ್ಷ್ಯಚಿತ್ರವನ್ನು ಬಿಡುಗಡೆಗೊಳಿಸಿ, ನುಡಿನಮನ ಸಲ್ಲಿಸುವರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಶಾಮನೂರು ಅವರಿಗೆ ನುಡಿನಮನ ಸಲ್ಲಿಸುವರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಶಾಮನೂರು ಶಿವಶಂಕರಪ್ಪ ಅವರ ಪುತ್ಥಳಿ ಅನಾವರಣಗೊಳಿಸಲಿದ್ದಾರೆ. ಅಯೋಧ್ಯೆಯ ಶ್ರೀರಾಮ ಮಂದಿರದ ಶ್ರೀರಾಮ ಮೂರ್ತಿ ಕೆತ್ತನೆ ಮಾಡಿದ ಮೈಸೂರಿನ ಅರುಣ್ ಯೋಗಿರಾಜ್ ಪುತ್ಥಳಿ ನಿರ್ಮಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಶಾಮನೂರು ಶಿವಶಂಕರಪ್ಪ ಅವರ ಜೀವನ ಕುರಿತ ಕಿರುಹೊತ್ತಿಗೆ ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಸಾನಿಧ್ಯ ವಹಿಸಲಿರುವ ಮಠಾಧೀಶರರು ಆಶೀರ್ವಚನ ನೀಡಲಿದ್ದಾರೆ. ಡಾ.ಶಾಮನೂರು ಶಿವಶಂಕರಪ್ಪನವರೊಂದಿಗಿನ ಸಾಂಗತ್ಯದ ಕುರಿತು ಮೊಮ್ಮಕ್ಕಳು ಮಾತನಾಡಲಿದ್ದಾರೆ.
ಬೆಂಗಳೂರಿನ ರವೀಂದ್ರ ಸೊರಗಾವಿ ಮತ್ತು ತಂಡದಿಂದ ವಚನ ಗಾಯನ ಪ್ರಸ್ತುತಪಡಿಸಲಿದ್ದಾರೆ.

ದಾವಣಗೆರೆ ನಗರದ ಆರ್ಎಂಸಿ ಮುಖ್ಯರಸ್ತೆಯ ಆನೆಕೊಂಡದಲ್ಲಿರುವ ಶ್ರೀ ಕಲ್ಲೇಶ್ವರ ರೈಸ್ ಮಿಲ್ನ ಹಿಂಭಾಗದ ಪ್ರದೇಶದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಿದ್ದು, ಮುಖ್ಯ ವೇದಿಕೆಯಲ್ಲಿ ಗುರುಗಳು ಹಾಗೂ ಗಣ್ಯರು ಮತ್ತು ಬಲಭಾಗದ ವೇದಿಕೆಯಲ್ಲಿ ಹರ-ಗುರು-ಚರಮೂರ್ತಿಗಳು ಮತ್ತು ಎಡ ಭಾಗದ ವೇದಿಕೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ ಸದಸ್ಯರು ಆಸೀನರಾಗಲಿದ್ದಾರೆ.
ಮುಖ್ಯ ವೇದಿಕೆಯ ಮುಂಭಾಗದಲ್ಲಿ ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳಿಗೆ ಹಾಗು ಸಾರ್ವಜನಿಕರಿಗೆ ಆಸೀನರಾಗಲು 25 ಸಾವಿರಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದೆ.
90 ಊಟದ ಕೌಂಟರ್
ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರಿಗೂ ಒಂದೇ ಬಗೆಯ ಊಟದ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ 90 ಊಟದ ಕೌಂಟರ್ಗಳನ್ನು ತೆರೆಯಲಾಗಿದೆ. ಗಣ್ಯರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ವಾಮೀಜಿಗಳಿಗೆ ದಾವಣಗೆರೆ ನಗರದ ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನ, ಎಸ್.ನಿಜಲಿಂಗಪ್ಪ ಬಡಾವಣೆಯ ಶ್ರೀ ಗುರು-ಬಕೇಶ್ವರ ಕಲ್ಯಾಣ ಮಂಟಪ ಹಾಗೂ ಪಿ.ಬಿ.ರಸ್ತೆಯ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.
ಇದಲ್ಲದೆ ಕುಡಿಯುವ ನೀರಿನ ವ್ಯವಸ್ಥೆ, ಅಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವೇದಿಕೆ ಪ್ರವೇಶಿಸಲು ಸಾರ್ವಜನಿಕರಿಗೆ ಬೇತೂರು ರಸ್ತೆಯಿಂದ, ರಿಂಗ್ ರಸ್ತೆ ಮುಖಾಂತರ ಮತ್ತು ಬಸಾಪುರ ರಸ್ತೆಯಿಂದ ರಿಂಗ್ ರಸ್ತೆ ಮುಖಾಂತರ ಈ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಲು ಅನುವು ಮಾಡಿಕೊಡಲಾಗಿದೆ.
