ಮೊಳಕಾಲ್ಮುರು:
ತಾಲ್ಲೂಕಿನ ಸಿದ್ಧಯ್ಯನಕೋಟೆ–ಇಳಕಲ್ ವಿಜಯ ಮಹಾಂತೇಶ್ವರ ಶಾಖಾಮಠದ ವತಿಯಿಂದ ಫೆಬ್ರವರಿ 5ರಿಂದ 9ರವರೆಗೆ “ಗಡಿನಾಡ ಸಾಂಸ್ಕೃತಿಕ ಉತ್ಸವ” ನಡೆಯಲಿದ್ದು, ಸಿದ್ಧತೆಗಳು ಭರದಿಂದ ನಡೆದಿದೆ.
ಬಸವಕೇಂದ್ರ, ಚಿತ್ತರಗಿ ವಿಜಯಮಹಾಂತೇಶ್ವರ ಮಠ, ಚಿತ್ತರಗಿ ಚಿಜ್ಯೋತಿ ಸಾಂಸ್ಕೃತಿಕ ಕಲಾವೇದಿಕೆ ಮತ್ತು ಕ್ರೀಡಾ ಯುವಕ ಸಂಘ ಹಾಗೂ ಬಸವ–ಅಂಬೇಡ್ಕರ್ ಜನಕಲ್ಯಾಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಠದ ಪೀಠಾಧ್ಯಕ್ಷ ಬಸವಲಿಂಗ ಸ್ವಾಮೀಜಿಯವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಫೆಬ್ರವರಿ 5ರಂದು ಸಂಜೆ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಹಂಪಿ ವಿಶ್ವವಿದ್ಯಾಲಯದ ಕುಲಸಚಿವ ವಿರೂಪಾಕ್ಷಿ ಪೂಜಾರಹಳ್ಳಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ‘ಶೈಕ್ಷಣಿಕ ಕ್ಷೇತ್ರದಲ್ಲಿ ಶರಣರ ಪಾತ್ರ’ ವಿಷಯದ ಕುರಿತು ವಿಚಾರಗೋಷ್ಠಿ ನಡೆಯುವುದು. ಇಳಕಲ್ಲ ವಿಜಯಮಹಾಂತೇಶ್ವರ ಮಠದ ಗುರುಮಹಾಂತ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಹಂಪಿ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಎನ್. ಚಿನ್ನಸ್ವಾಮಿ ಸೂಸಲೆ ಉಪನ್ಯಾಸ ನೀಡುವರು. ಚಿತ್ರದುರ್ಗದ ಬಸವನಾಗೀದೇವರ ಸ್ವಾಮೀಜಿ ಉಪಸ್ಥಿತರಿರುವರು.
ಫೆಬ್ರವರಿ 6ರಂದು ಯುವಜನೋತ್ಸವ ಆಯೋಜಿಸಲ್ಪಟ್ಟಿದ್ದು, ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಗುಳೇದಗುಡ್ಡದ ಜಗದ್ಗುರು ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಜೆ. ಮಂಜುನಾಥ್ ಅವರು ಭಾಗವಹಿಸಲಿದ್ದಾರೆ ಎಂದು ಸ್ವಾಮೀಜಿ ಮಾಹಿತಿ ನೀಡಿದರು.
7 ರಂದು ಬಸವತತ್ವ ಪ್ರತಿಪಾದಕ ಎಂ. ಭೀಮಪ್ಪ ಮಾಸ್ತರ್ ಅವರ ಜನ್ಮಶತಮಾನೋತ್ಸವ ಹಾಗೂ ಮಹಾಂತ ಗುರುಕಾರಣ್ಯ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಪಾಂಡೋಮಟ್ಟಿ ಗುರುಬಸವರ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದು, ಬಸವತತ್ವ ಪ್ರತಿಪಾದಕರಾದ ಬೆಂಗಳೂರಿನ ಉಮಾ ಬಿ.ಎಸ್. ವಿಜಯೇಂದ್ರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
8 ರಂದು ಶಿವಯೋಗಿಗಳ ಸ್ಮರಣೆ, ಶಿವಾನುಭವ ಹಾಗೂ ಚಿತ್ತರಗಿ ಮಹಾಂತ ಗುರುಕಾರಣ್ಯ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಈ ಸಂದರ್ಭದಲ್ಲಿ ಪ್ರಶಸ್ತಿಗೆ ಭಾಜನರಾಗಿರುವ ಎಸ್. ಮಲ್ಲಿಕಾರ್ಜುನ ಖರ್ಗೆ ಅವರನ್ನು ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ಸಚಿವರಾದ ಜಿ. ಪರಮೇಶ್ವರ್, ಎಚ್.ಸಿ. ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಡಿ. ಸುಧಾಕರ್, ಶಾಸಕ ಎನ್.ವೈ. ಗೋಪಾಲಕೃಷ್ಣ ಹಾಗೂ ಮಾಜಿ ಸಚಿವ ಎಚ್. ಆಂಜನೇಯ ಅವರು ಭಾಗವಹಿಸಲಿದ್ದಾರೆ.
9 ರಂದು ಬೆಳಿಗ್ಗೆ ಬಸವತತ್ವ ಸಮಾವೇಶ ಹಮ್ಮಿಕೊಳ್ಳಲಾಗಿದೆ. ನಿಡಸೂಸಿ ಸಿದ್ಧ ಸಂಸ್ಥಾನಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹಾಗೂ ಚಿತ್ರದುರ್ಗ ಮಾದಾರ ಗುರುಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ ನೇತೃತ್ವ ವಹಿಸಲಿರುವರು. ಸಚಿವ ಶಿವರಾಜ್ ತಂಗಡಗಿ ಹಾಗೂ ಸಂಸತ ಸದಸ್ಯ ಗೋವಿಂದ ಕಾರಜೋಳ ಅವರು ಭಾಗವಹಿಸುವರು.
ಅದೇ ದಿನ ರಾತ್ರಿ ಗುರು ತಿಪ್ಪೇರುದ್ರಸ್ವಾಮೀ ಮಹಾತ್ಮೆ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ ಎಂದು ಬಸವಲಿಂಗ ಸ್ವಾಮೀಜಿ ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಠದ ಕಾರ್ಯದರ್ಶಿ ಪಿ.ಆರ್. ಕಾಂತರಾಜ್, ಮುಖಂಡರಾದ ಭೋಗೇಶಗೌಡ, ಮರಿಸ್ವಾಮಿ ಹಾಗೂ ಭೋವಿ ಸಮಾಜದ ಅಧ್ಯಕ್ಷ ಬಿ. ಬಸಣ್ಣ ಉಪಸ್ಥಿತರಿದ್ದರು.
ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿ
https://www.facebook.com/basavamedia1/
