ಏಪ್ರಿಲ್ 1ರಂದು ಶಿವಕುಮಾರ ಸ್ವಾಮೀಜಿ 119ನೇ ಜಯಂತಿ

ಬಸವ ಮೀಡಿಯಾ
ಬಸವ ಮೀಡಿಯಾ

ಮಹೋತ್ಸವಕ್ಕೆ ರಾಷ್ಟ್ರಪತಿ ಮುರ್ಮು ಆಗಮನ, ಲಕ್ಷ ಭಕ್ತರು ಸೇರುವ ನಿರೀಕ್ಷೆ

ತುಮಕೂರು:

ಕರ್ನಾಟಕ ರತ್ನ, ಕಾಯಕಯೋಗಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಏಪ್ರಿಲ್ 1ರಂದು ಬೆಳಗ್ಗೆ 10.30ಕ್ಕೆ ಸಿದ್ದಗಂಗಾ ಮಠದಲ್ಲಿ ನಡೆಯಲಿದೆ. ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶ್ರೀಮಠದ ಪೀಠಾಧಿಪತಿ ಸಿದ್ದಲಿಂಗ ಸ್ವಾಮೀಜಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈ ಹಿಂದೆ ದೇಶದ ಮೊದಲ ಮಹಿಳಾ ರಾಷ್ಟ್ರಪತಿಯಾಗಿದ್ದ ಪ್ರತಿಭಾ ಪಾಟೀಲ ಸಹ ಶ್ರೀಗಳ ಹುಟ್ಟುಹಬ್ಬ ಹಾಗೂ ಗುರುವಂದನಾ ಮಹೋತ್ಸವದಲ್ಲಿ ಭಾಗಿಯಾಗಿದ್ದರು. ಇದೀಗ 2ನೇ ಮಹಿಳಾ ರಾಷ್ಟ್ರಪತಿಯಾಗಿರುವ ದ್ರೌಪದಿ ಮುರ್ಮು ಶ್ರೀಮಠಕ್ಕೆ ಆಗಮಿಸಲಿದ್ದಾರೆ.

ಏಪ್ರಿಲ್ 1 ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೂಜ್ಯ ಸಿದ್ದಲಿಂಗ ಸ್ವಾಮೀಜಿ ನೀಡಲಿರುವ ಬಸವ ಮೂರ್ತಿ

ಮೊದಲು ರಾಷ್ಟ್ರಪತಿಗಳು ಶ್ರೀಗಳ ಗದ್ದುಗೆಯನ್ನು ಭೇಟಿ ನೀಡಿ ದರ್ಶನ ಪಡೆಯಲಿದ್ದು, ನಂತರ 1 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಭಕ್ತಾದಿಗಳು ಅಂದು ಬೆಳಗ್ಗೆ 9.30ಕ್ಕೆ ಮುಂಚಿತವಾಗಿ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿ ಆಸೀನರಾಗಬೇಕು. ರಾಷ್ಟ್ರಪತಿ ಭೇಟಿ ಹಿನ್ನೆಲೆ ಹೆಚ್ಚಿನ ಭದ್ರತಾ ವ್ಯವಸ್ಥೆ ಇರುವುದರಿಂದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅನಿವಾರ್ಯವಾಗಿದೆ ಎಂದರು.

1ರಂದು ಬೆಳಗಿನ ಜಾವ ಗದ್ದುಗೆಯಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ. ನಂತರ ಬೆಳಗ್ಗೆ 8 ಗಂಟೆಗೆ ಶ್ರೀಗಳ ಪುತ್ಥಳಿ ಉತ್ಸವವು ಶ್ರೀಮಠದ ಆವರಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಸಮಾರಂಭದ ನೇತೃತ್ವವನ್ನು ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸುವರು. ಮಠದ ಉತ್ತರಾಧಿಕಾರಿ ಶಿವಸಿದ್ದೇಶ್ವರ ಸ್ವಾಮೀಜಿ ಉಪಸ್ಥಿತರಿರುವರು.

ಗೌರವ ಅತಿಥಿಗಳಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಮಂತ್ರಿಗಳಾದ ಪ್ರಹ್ಲಾದ ಜೋಶಿ, ವಿ. ಸೋಮಣ್ಣ, ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಶಾಸಕರಾದ ಟಿ.ಬಿ. ಜಯಚಂದ್ರ, ಕೆ.ಎನ್. ರಾಜಣ್ಣ, ಜಿ.ಬಿ. ಜ್ಯೋತಿಗಣೇಶ್, ಬಿ. ಸುರೇಶಗೌಡ ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.

ವೇದಿಕೆ ಕಾರ್ಯಕ್ರಮದ ನಂತರ ವೀಣಾವಾದನ ಹಾಗೂ 119 ಮಹಿಳೆಯರಿಂದ ವಚನ ಗಾಯನ ಕಾರ್ಯಕ್ರಮ ನಡೆಯಲಿದೆ.

ರಾಷ್ಟ್ರಪತಿ ಭೇಟಿ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ಭಕ್ತರಿಗೆ ಪರ್ಯಾಯ ಮಾರ್ಗ ವ್ಯವಸ್ಥೆ ಮಾಡಲಾಗಿದೆ. ಎಲ್ಲರೂ ನಿಯಮಗಳನ್ನು ಪಾಲಿಸಬೇಕು ಎಂದು ಪೂಜ್ಯರು ಮನವಿ ಮಾಡಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಹೋತ್ಸವದಲ್ಲಿ ಕೊಡಮಾಡಲಿರುವ ವಿಶ್ವಗುರು ಬಸವೇಶ್ವರ ಮೂರ್ತಿಯನ್ನು ಇದೇ ಸಂದರ್ಭದಲ್ಲಿ ಸ್ವಾಮೀಜಿ ಮಾಧ್ಯಮಗಳ ಮುಂದೆ ಪ್ರದರ್ಶಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಿದ್ದಗಂಗಾ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಟಿ.ಕೆ. ನಂಜುಂಡಪ್ಪ, ಜಯವಿಭವ ಸ್ವಾಮಿ, ಡಾ. ಶಿವಕುಮಾರಯ್ಯ, ಪ್ರೊ. ದಿನೇಶ್ ಸೇರಿದಂತೆ ಮತ್ತಿತರರು ಇದ್ದರು.

ಜಯಂತಿ ಹಾಗೂ ಗುರುವಂದನಾ ಸಮಾರಂಭಕ್ಕೆ ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಬೆಳಗ್ಗೆ 7 ಗಂಟೆಯಿಂದ ರಾತ್ರಿ 10.30ರವರೆಗೆ ಮಠದ ವತಿಯಿಂದ ನಿರಂತರ ದಾಸೋಹ ನಡೆಯಲಿದೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/FjCpFjdZ7HXLwuA2LCEhga

Share This Article
Leave a comment

Leave a Reply

Your email address will not be published. Required fields are marked *