ಭಾಲ್ಕಿ:
ದಕ್ಷಿಣ ಭಾರತದ ಸಂಗೀತ ಲೋಕವನ್ನು ಶ್ರೀಮಂತಗೊಳಿಸಿದ್ದವರಲ್ಲಿ ಎಸ್. ಜಾನಕಿ ಅಗ್ರಗಣ್ಯರು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಅಧ್ಯಕ್ಷ ಶಶಿಧರ ಕೋಸಂಬೆ ಹೇಳಿದರು.
ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಗಾನಕೋಗಿಲೆ ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ದಕ್ಷಿಣ ಭಾರತದ ಖ್ಯಾತ ಗಾನಕೋಗಿಲೆ ಎಸ್. ಜಾನಕಿ ಅವರು ಭಾರತೀಯ ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ಹಿನ್ನೆಲೆ ಗಾಯಕಿಯಾಗಿದ್ದರು. 20 ಭಾಷೆಗಳಲ್ಲಿ ಹಾಡು ಹಾಡಿ ದಾಖಲೆ ಸೃಷ್ಟಿಸಿದ್ದಾರೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಸೇರಿದಂತೆ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 48,000ಕ್ಕೂ ಹೆಚ್ಚು ಹಾಡುಗಳಿಗೆ ದನಿಯಾಗಿದ್ದಾರೆ.
“ದಕ್ಷಿಣ ಭಾರತದ ನೈಟಿಂಗೇಲ್” ಎಂದೇ ಪ್ರಸಿದ್ಧರಾಗಿದ್ದರು. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಹಾಗೂ 33 ವಿವಿಧ ರಾಜ್ಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಚಿಕ್ಕಮಕ್ಕಳ ಧ್ವನಿಯಲ್ಲೂ ಅದ್ಭುತವಾಗಿ ಹಾಡಬಲ್ಲ ಅಪರೂಪದ ಪ್ರತಿಭೆ ಇವರದಾಗಿತ್ತು. ಇವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಎನ್. ರಾಜು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.
