ಬೆಂಗಳೂರು:
ಸಂಶೋಧಕ ಎಂ.ಎಂ. ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ವಾಸುದೇವ್ ಭಗವಾನ್ ಸೂರ್ಯವಂಶಿ ಮತ್ತು ಅಮಿತ್ ಬಡ್ಡಿ ಅವರಿಗೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.
ಕಲಬುರ್ಗಿ ಅವರ ಪ್ರಕರಣದಲ್ಲಿ 138 ಸಾಕ್ಷ್ಯಗಳ ಪೈಕ್ತಿ ಕೇವಲ 10 ಸಾಕ್ಷ್ಯಗಳ ವಿಚಾರಣೆ ಮಾತ್ರ ಈಗ ಮುಗಿದಿದೆ. ಉಳಿದ ಸಾಕ್ಷಿಗಳ ವಿಚಾರಣೆ ಸದ್ಯಕ್ಕೆ ಮುಗಿಯುವ ಸಾಧ್ಯತೆ ಇಲ್ಲದ್ದರಿಂದ ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಆರೋಪಿಗಳ ವಕೀಲರು ಕೋರಿದರು ಎಂದು ವಾರ್ತಾ ಭಾರತಿ ವರದಿ ಮಾಡಿದೆ.
ಈ ವಾದವನ್ನು ಒಪ್ಪಿ ನ್ಯಾಯಮೂರ್ತಿ ಎಂ.ಜಿ.ಉಮಾ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದರು.
ಕಳೆದ ಮಾರ್ಚ್ನಲ್ಲಿ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ವಿಶೇಷ ನ್ಯಾಯಾಲಯವನ್ನು ಆರಂಭಿಸುವುದಾಗಿ ಹೇಳಿತ್ತು. ಈಗ ಜುಲೈ ಅಂತ್ಯ ಸಮೀಪಿಸುತ್ತಿದ್ದರೂ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿವೆಂದು ನ್ಯಾಯಮೂರ್ತಿ ಉಮಾ ಹೇಳಿದರು.
ಆಗ ಪ್ರಾಸಿಕ್ಯೂಷನ್ ಪರ ಸರಕಾರಿ ವಕೀಲ ಅಶೋಕ್ ನಾಯಕ್ ಅವರು ಮುಂದಿನ ವಿಚಾರಣೆ ವೇಳೆಗೆ ಈ ವಿಚಾರದ ಬಗೆಗಿನ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದರು.
ವಿಶೇಷ ನ್ಯಾಯಾಲಯ ಆರಂಭಿಸುವಲ್ಲಿ ನಡೆದಿರುವ ವಿಳಂಬದ ಬಗ್ಗೆ ನ್ಯಾಯಮೂರ್ತಿ ಉಮಾ ಅಸಮಾಧಾನ ವ್ಯಕ್ತಪಡಿಸಿದರು.