ಡಿಸೆಂಬರ್ 10ರಂದು ಬೆಳಗಾವಿ ಚಲೋ
ಕಲಬುರಗಿ:
ಲಿಂಗಾಯತ ದೀಕ್ಷ, ಪಂಚಮಸಾಲಿ ಸಮಾಜದ ನ್ಯಾಯಯುತ ಮೀಸಲಾತಿ ಹಕ್ಕಿಗಾಗಿ ಡಿಸೆಂಬರ್ 10ರಂದು ಬೆಳಗಾವಿ ಚಲೋ ಹಾಗೂ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೂಜ್ಯ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಲಿಂಗಾಯತ ಪಂಚಮಸಾಲಿ ಸಮಾಜವು ಹಲವು ವರ್ಷಗಳಿಂದ ಸಾಮಾಜಿಕ ನ್ಯಾಯ, ಶೈಕ್ಷಣಿಕ ಅವಕಾಶಗಳು ಹಾಗೂ ಉದ್ಯೋಗದಲ್ಲಿ ಸಮಾನ ಅವಕಾಶಗಳಿಗಾಗಿ ನಿರಂತರ ಹೋರಾಟ ನಡೆಸುತ್ತಾ ಬಂದಿದೆ. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2-ಎ ಮೀಸಲಾತಿ ಕಲ್ಪಿಸಬೇಕು ಹಾಗೂ ಉಪಸಮುದಾಯಗಳಿಗೆ ಕೇಂದ್ರ ಸರ್ಕಾರದ ಮೀಸಲಾತಿ ಸೌಲಭ್ಯ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ನಮ್ಮ ಪ್ರಮುಖ ಮತ್ತು ನ್ಯಾಯಯುತ ಬೇಡಿಕೆಯಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಹೋರಾಟ ಯಾವುದೇ ರಾಜಕೀಯ ಪಕ್ಷದ ವಿರುದ್ಧವಾಗಲಿ ಅಥವಾ ಯಾವುದೇ ವ್ಯಕ್ತಿಯ ವಿರುದ್ಧವಾಗಲಿ ಅಲ್ಲ. ಇದು ನಮ್ಮ ಸಮಾಜದ ಭವಿಷ್ಯದ ಪೀಳಿಗೆಯ ಶೈಕ್ಷಣಿಕ, ಉದ್ಯೋಗ ಹಾಗೂ ಸಾಮಾಜಿಕ ನ್ಯಾಯದ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟವಾಗಿದೆ ಎಂದರು.
ಕಲಬುರಗಿ ಜಿಲ್ಲೆಯ ಎಲ್ಲ ತಾಲೂಕು ಸೇರಿದಂತೆ ಜಿಲ್ಲೆಯ ಸಮಸ್ತ ಲಿಂಗಾಯತ ಪಂಚಮಸಾಲಿ ಸಮಾಜದ ಬಾಂಧವರು, ಯುವಕರು, ಮಹಿಳೆಯರು, ರೈತರು, ವಿದ್ಯಾರ್ಥಿಗಳು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸ್ವಾಮೀಜಿ ತಿಳಿಸಿದರು.
2- ಎ ಮೀಸಲಾತಿಗೆ ಆಗ್ರಹಿಸಿ ಕಳೆದ ಆರು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದ್ದು, ಸಾಮಾಜಿಕ ನ್ಯಾಯ ಸಿಗುವವರೆಗೆ ಹೋರಾಟ ನಿರಂತರವಾಗಿರುತ್ತದೆ ಎಂದು ಶರಣು ಪಪ್ಪಾ, ಅಧ್ಯಕ್ಷರು, ಅಖಿಲ ಭಾರತ ದೀಕ್ಷ ಪಂಚಮಸಾಲಿ ಸಮಾಜ, ಕಲಬುರಗಿ ಅವರು ಹೇಳಿದರು.
ಈ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ಬೆಳಗಾವಿಯ ಸುವರ್ಣ ವಿಧಾನಸೌಧದ ಸಮೀಪ ಒಂದು ದಿನ ಸೂರ್ಯೋದಯದಿಂದ ಸೂರ್ಯಾಸ್ಥದವರೆಗೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಸೋಮಶೇಖರ್ ಬಿ. ಮೂಲಗೆ ಹೇಳಿದರು.
ಮೂಲಗೆ ಕಲ್ಯಾಣಪ್ಪ ಪಾಟೀಲ ಮಳಖೇಡ, ಮಲ್ಲನಗೌಡ ಪಾಟೀಲ ಇತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/HhJYSZVofEgD6VIx5ufPBU
