ಬೀದರ್
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಪ್ರಾಮಾಣಿಕತೆ ಹಾಗೂ ವಚನ ಸಾಹಿತ್ಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ರವಿ ಹಂಜ್ ಅವರನ್ನು ಕೂಡಲೇ ಬಂಧಿಸಬೇಕು, ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಬಸವರಾಜ ಧನ್ನೂರ್ ಹೇಳಿದರು.
ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ.19ರಂದು ನಗರದ ಬಸವೇಶ್ವರ ವೃತ್ತದಲ್ಲಿ ಹಂಜ್ ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ದಹಿಸಲಾಗುವುದು.
ಕಳೆದ ಒಂದೆರಡು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಬಸವ ತತ್ತ್ವ, ಲಿಂಗಾಯತ ಧರ್ಮ, ಬಸವಾದಿ ಶರಣರು, ಮಠಾಧೀಶರು ಹಾಗೂ ಬಸವಪರ ಹೋರಾಟಗಾರರ ವಿರುದ್ಧ ಹಂಜ್ ಲೇಖನಗಳನ್ನು ಪ್ರಕಟಿಸುತ್ತಿದ್ದಾರೆ.
ತಮ್ಮ ಲೇಖನಗಳನ್ನು ಸಂಗ್ರಹಿಸಿ ಸುಮಾರು 600 ಪುಟಗಳ ‘ಬಸವ ಮಂಟಪ’ ಕೃತಿ ಯನ್ನು ಹೊರ ತಂದಿದ್ದಾರೆ.
ನವೆಂಬರ್ 15ರಂದು ಬೆಂಗಳೂರಿನ ಎಫ್ಕೆಸಿಸಿಐ ಸಭಾಂಗಣದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭಕ್ಕೂ ಮುನ್ನ ನೀಡಿದ ಮಾಧ್ಯಮ ಸಂದರ್ಶನದಲ್ಲಿ ಬಸವಣ್ಣನವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದರು.
ಕೃತಿ ನಿಷೇಧಕ್ಕೆ ಒತ್ತಾಯ:
ರವಿ ಹಂಜ್ ಬರೆದ ‘ಬಸವ ಮಂಟಪ’ ಕೃತಿಯಲ್ಲಿ ಬಸವ ತತ್ತ್ವದ ಪ್ರಚಾರಕರು, ಮಠಾಧೀಶರು ಹಾಗೂ ಲಿಂಗಾಯತ ಧರ್ಮದ ಮಾನ್ಯತೆಗಾಗಿ ಹೋರಾಟ ನಡೆಸಿದ ಅನೇಕ ಮುಖಂಡರ ವಿರುದ್ಧ ಅವಹೇಳನಕಾರಿ ಬರಹಗಳಿವೆ ಎಂದು ಆರೋಪಿಸಿದರು.
ಕೃತಿಯಲ್ಲಿರುವ ಆಕ್ಷೇಪಾರ್ಹ ಅಂಶಗಳನ್ನು ಪರಿಶೀಲಿಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಪುಸ್ತಕದ ನಿಷೇಧಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿ, ರವಿ ಹಂಜ್ ವಿರುದ್ಧ ಪ್ರಕರಣ ದಾಖಲಿಸಲು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ರವಿ ಹಂಜ್ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ಸಲ್ಲಿಸಲಾಗುವುದು. ಅವರ ಅವಹೇಳನಕಾರಿ ಹೇಳಿಕೆಗಳು ಪ್ರಸಾರವಾಗುತ್ತಿರುವ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧವೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂವಿಧಾನವು ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯಿ ನೀಡಿದೆ. ಆದರೆ, ಮತ್ತೊಂದು ಧರ್ಮವನ್ನು ಅವಹೇಳನ ಮಾಡುವ ಮೂಲಕ ಅದರ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ತರುವುದು ಸರಿಯಲ್ಲ.
ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಈ ಪ್ರಕರಣದಲ್ಲಿ ಸ್ವಯಂಪ್ರೇರಿತವಾಗಿ ಕಾನೂನು ಕ್ರಮ ಜರುಗಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.
ಪೂಜ್ಯ ಸಿದ್ಧರಾಮ ಶರಣರು ಬೆಲ್ದಾಳ, ಪೂಜ್ಯ ಚನ್ನಬಸವಾನಂದ ಸ್ವಾಮೀಜಿ, ಪೂಜ್ಯ ಸತ್ಯದೇವಿ ಮಾತಾಜಿ ಹಾಗೂ ಪೂಜ್ಯ ಬಸವಪ್ರಭು ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷರಾದ ಬಸವರಾಜ ಬುಳ್ಳಾ, ಭಾರತೀಯ ಬಸವ ಬಳಗದ ರಾಜ್ಯಾಧ್ಯಕ್ಷರಾದ ಬಾಬು ವಾಲಿ, ಲಿಂಗಾಯತ ಸಮಾಜದ ಅಧ್ಯಕ್ಷರಾದ ಕುಶಲರಾವ ಪಾಟೀಲ್ ಖಾಜಾಪುರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಅನೇಕ ಬಸವ ಭಕ್ತರು ಉಪಸ್ಥಿತರಿದ್ದರು.
