ಅನುಭವ ಮಂಟಪ ಉತ್ಸವಕ್ಕೆ ಸಂಗೀತ ನಿರ್ದೇಶಕ ಹಂಸಲೇಖಗೆ ಆಹ್ವಾನ

ಬಸವ ಮೀಡಿಯಾ
ಬಸವ ಮೀಡಿಯಾ

ಭಾಲ್ಕಿ:

ಶರಣರ ಭೂಮಿ ಬಸವಕಲ್ಯಾಣದ ಅನುಭವ ಮಂಟಪ ಪರಿಸರದಲ್ಲಿ ಬರುವ 2026ರ ನ.28 ಮತ್ತು 29 ರಂದು ಜರುಗಲಿರುವ 47ನೆಯ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಆಹ್ವಾನಿಸಲಾಗಿದೆ.

ಬೆಂಗಳೂರಿನ ರಾಜಾಜಿನಗರದ ಹಂಸಲೇಖ ಅವರ ನಿವಾಸಕ್ಕೆ ಮಂಗಳವಾರ ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಭೇಟಿ ನೀಡಿ ಹಂಸಲೇಖ ಅವರನ್ನು ಬಸವಣ್ಣನವರ ಭಾವಚಿತ್ರ ನೀಡಿ ಸನ್ಮಾನಿಸಿ, ಗೌರವಿಸಿದರು.

ಸಂಗೀತ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಸೇವೆ ಅನುಪಮವಾಗಿದೆ. ತಾವುಗಳು 12ನೆಯ ಶತಮಾನದಲ್ಲಿ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದ ನೆಲದಲ್ಲಿ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ಐತಿಹಾಸಿಕವಾಗಿ ನಡೆಯಲಿರುವ ಎರಡು ದಿವಸದ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪೂಜ್ಯರು ಕೋರಿದರು.

ಸಮಸಮಾಜ ನಿರ್ಮಾಣ ಮಾಡುವಲ್ಲಿ ಬಸವಾದಿ ಶರಣರ ಕೊಡುಗೆ ದೊಡ್ಡದಿದೆ. ಅಂತಹ ಭೂಮಿಗೆ ತಾವು ಬರಲು ಉತ್ಸುಕರಿದ್ದು, ಪರಮ ಪೂಜ್ಯರು ನನ್ನನ್ನು ಪ್ರೀತಿಯಿಂದ ಆಶೀರ್ವದಿಸಿ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ. ಈ ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಹಂಸಲೇಖ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಅಧ್ಯಕ್ಷ ಶಶಿಧರ ಕೋಸಂಬೆ ಜತೆಗಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/Bum3N1nvJ1T3EV8phOUece

Share This Article
Leave a comment

Leave a Reply

Your email address will not be published. Required fields are marked *