‘ಬುದ್ಧ, ಬಸವ, ಅಂಬೇಡ್ಕರ್ ತತ್ವಗಳಿಂದ ಪ್ರಗತಿ ಸಾಧಿಸಲು ಸಾಧ್ಯ’

ಬಸವ ಮೀಡಿಯಾ
ಬಸವ ಮೀಡಿಯಾ

ಆಳಂದ:

ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ತತ್ವ ಮತ್ತು ಸಿದ್ಧಾಂತದಗಳಿಂದಲೇ ದೇಶದಲ್ಲಿ ಸಮಾನತೆ, ಸಹೋದರತೆ ಮತ್ತು ಪ್ರಗತಿ ಸಾಧಿಸಲು ಸಾಧ್ಯ ಎಂದು ಮಂಡರಗಿ, ಬೈಲೂರು ನಿಷ್ಕಲ ಮಂಟಪದ ಪೂಜ್ಯ ನಿಜಗುಣಾನಂದ ಮಹಾಸ್ವಾಮಿಗಳು ಹೇಳಿದರು.

ತಾಲೂಕಿನ ನರೋಣಾ ಗ್ರಾಮದಲ್ಲಿ ಗ್ರಾಮ ಪಂಚಾಯತ ಹಾಗೂ ದಲಿತ ಸಂಘರ್ಷ ಸಮಿತಿ ಘಟಕದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಅನುಭಾವ ನುಡಿಗಳನ್ನಾಡಿದರು.

ಸಮಾಜವನ್ನು ಗುಲಾಮಗಿರಿಯಲ್ಲಿ ಇಡಲು ಬಯಸುವ ಬಂಡವಾಳಶಾಹಿ ಮತ್ತು ಪಟ್ಟಭದ್ರ ಹಿತಾಸಕ್ತಿಗಳ ಕಪಿಮುಷ್ಠಿಯಿಂದ ಹೊರಬರಲು ಬಾಬಾಸಾಹೇಬ ಅವರ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಾರ್ಗವನ್ನು ಜನರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಸಮಾಜದಲ್ಲಿ ಇನ್ನೂ ಅಂಧಶ್ರದ್ಧೆ, ಮೂಢನಂಬಿಕೆ ಮತ್ತು ಕಂದಾಚಾರಗಳು ಜನರ ಮನಸ್ಸನ್ನು ಕತ್ತಲೆಯಲ್ಲಿಟ್ಟಿವೆ. ಶಿಕ್ಷಣವೇ ಮನುಷ್ಯನ ಬದುಕನ್ನು ಬದಲಾಯಿಸುವ ಮಹಾಶಕ್ತಿ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವತ್ತ ಹೆಚ್ಚಿನ ಗಮನ ನೀಡಬೇಕು ಎಂದು ಸಲಹೆ ನೀಡಿದರು.

ಸಮಾರಂಭದ ಸಾನಿಧ್ಯ ವಹಿಸಿದ್ದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ಬುದ್ಧ, ಬಸವ ಮತ್ತು ಅಂಬೇಡ್ಕರ್‌ ಅವರ ಆದರ್ಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಂಡಾಗ ದೇಶದ ಭವಿಷ್ಯ ಉಜ್ವಲವಾಗುತ್ತದೆ ಎಂದು ಹೇಳಿದರು.

ಡಿಎಸ್‌ಎಸ್‌ ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಮಾರಂಭದುದ್ದಕ್ಕೂ ದಲಿತ ಕಲಾ ಮಂಡಳಿಯ ಕ್ರಾಂತಿಕಾರಿ ಹಾಗೂ ಜಾಗೃತಿ ಗೀತೆಗಳು ಜನಮನ ಸೆಳೆದವು. ಅಂಬಣ್ಣ ಜೀವಣಗಿ ಹಾಗೂ ರಘುನಾಥ ಬಾಯಿ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಹಿರಿಯ ಸಾಹಿತಿ ಎಸ್‌.ಪಿ. ಸುಳ್ಳದ, ಬಾಬುರಾವ ವಾಲಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಚಂದ್ರಕಾಂತ ಸಂಗೋಳಗಿ, ಸುರೇಶ ಹಾದಿಮನಿ, ಬಿ.ಸಿ. ವಾಲಿ, ಬಸವರಾಜ ಚಕ್ಕಿ, ನಿವೃತ್ತ ಎಇಇ ಅಶೋಕ ಅಂಬಲಗಿ ಮತ್ತಿತರರಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/Ky8rMVgQct2AZDAbXDYq2U

Share This Article
Leave a comment

Leave a Reply

Your email address will not be published. Required fields are marked *