ಬೆಂಗಳೂರು :
ಪ್ರತಿಷ್ಠಿತ ಬಸವ ರಾಷ್ಟ್ರೀಯ ಪ್ರಶಸ್ತಿಗೆ ಬೀದರ ಜಿಲ್ಲೆಯ ಸಿದ್ದರಾಮ ಶರಣರು ಬೆಲ್ದಾಳ (ಬೀದರ) ಅವರನ್ನು ಆಯ್ಕೆ ಮಾಡಲಾಗಿದ್ದು, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ವಿಭಾಗದ ಅಕ್ಕಮಹಾದೇವಿ ಪ್ರಶಸ್ತಿಗೆ ಕೆ. ನೀಲಾ (ಕಲಬುರಗಿ), ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ ಸಿದ್ದನಗೌಡ ಪಾಟೀಲ (ಧಾರವಾಡ) ಮತ್ತು ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿಗೆ ಪ್ರೊ. ಎಸ್. ಜಿ. ಸಿದ್ದರಾಮಯ್ಯ (ತುಮಕೂರು)ಆಯ್ಕೆಯಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ಬಿ.ವಿ. ಕಾರಂತ ಪ್ರಶಸ್ತಿಗೆ ಹಿರಿಯ ರಂಗಕರ್ಮಿ ಪ್ರಸನ್ನ ಅವರು ಆಯ್ಕೆಯಾಗಿದ್ದಾರೆ.
ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿಗೆ ಮಂಡ್ಯ ಜಿಲ್ಲೆಯ ಕಂಬದಹಳ್ಳಿಯ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ ಆಯ್ಕೆಯಾಗಿದ್ದಾರೆ.
ಪಂಪ ಪ್ರಶಸ್ತಿಗೆ – ದೇವನೂರು ಮಹಾದೇವ (ಮೈಸೂರು), ಪ್ರೊ. ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ – ಅಲ್ಲಾಬಕ್ಷ ಮೀರಾಸಾಹೇಬ ಮಿರ್ಜಿ (ವಿಜಯಪುರ), ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ – ಡಾ. ಸುಕನ್ಯಾ ಮಾರುತಿ (ಬಳ್ಳಾರಿ), ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ – ಜಿ.ವಿ. ಶಾರದಾ (ತುಮಕೂರು), ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ – ಗಂಗಾರಾಮ ಚಂಡಾಳ (ಕೋಲಾರ) ಅವರು ಆಯ್ಕೆಯಾಗಿದ್ದಾರೆ.
ರಾಜ್ಯದ ಸಾಹಿತ್ಯ, ಕಲೆ, ಸಂಗೀತ, ನಾಟಕ ಹಾಗೂ ಸಮಾಜ ಸೇವಾ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಗಣ್ಯರನ್ನು ಈ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
