1958ರ ಕಾಯ್ದೆಯ ಅಡಿಯಲ್ಲಿ ರಾಷ್ಟ್ರೀಯ ಮಹತ್ವದ ಸ್ಮಾರಕವೆಂದು ಘೋಷಿಸುವಂತೆ ಮನವಿ
ಬೆಂಗಳೂರು
ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಕರ್ನಾಟಕದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿರುವ ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರ ಸಮಾಧಿಯು ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಬ್ರಿಟಿಷರ ವಿರುದ್ಧ ಶಸ್ತ್ರಾಸ್ತ್ರ ಯುದ್ಧ ನಡೆಸಿ ಹಿಮ್ಮೆಟ್ಟಿಸಿದ ವೀರ ಮಹಿಳೆ ರಾಣಿ ಚೆನ್ನಮ್ಮ ಅವರ ಶೌರ್ಯ ಮತ್ತು ಆದಮ್ಯ ಚೈತನ್ಯವು ರಾಷ್ಟ್ರಾದ್ಯಂತ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇದೆ.
ಚೆನ್ನಮ್ಮ ಅವರ ಸಮಾಧಿಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ರಾಷ್ಟ್ರೀಯ ಮಹತ್ವದ ಸ್ಮಾರಕವೆಂದು ಘೋಷಿಸುವಂತೆ ಸಿಎಂ ಮನವಿ ಮಾಡಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿಯ ತಾಣವು ಐತಿಹಾಸಿಕ ಮಹತ್ವವನ್ನು ಹೊಂದಿದೆ. ಈ ಪವಿತ್ರ ಸ್ಥಳವನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕ ಎಂದು ಮೌಲ್ಯಮಾಪನ ಮಾಡುವ ಮತ್ತು ಘೋಷಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸಂಸ್ಕೃತಿ ಸಚಿವಾಲಯ ಮತ್ತು ಭಾರತೀಯ ಪುರಾತತ್ವ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದಲ್ಲಿ ವಿನಂತಿಸಿದ್ದಾರೆ.