ಇಂದಿನಿಂದ ಚಿತ್ರದುರ್ಗದಲ್ಲಿ ಶರಣ ಸಾಹಿತ್ಯ ಸಮ್ಮೇಳನ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಂಗಳೂರು

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಜ.18 ಮತ್ತು 19ರಂದು ಚಿತ್ರದುರ್ಗದ ಮುರುಘಾ ಮಠದ ಅನುಭವ ಮಂಟಪದ ವೇದಿಕೆಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಡಾ.ಸಿ.ಸೋಮಶೇಖರ ತಿಳಿಸಿದ್ದಾರೆ.

ಗುರುವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ, ಶರಣ ಸಾಹಿತ್ಯದಲ್ಲಿ ಮಹಿಳಾ ಸಂವೇದನೆ, ಶರಣ ಸಾಹಿತ್ಯದತ್ತ ಯುವಜನತೆ, ಪ್ರಾತಃಸ್ಮರಣೀಯರು, ಶರಣರು ಪ್ರತಿಪಾದಿಸಿದ ಜೀವನ ಮೌಲ್ಯಗಳು, ಶರಣ ಸಾಹಿತ್ಯಾಧಾರಿತ ನಾಟಕಗಳು, ಆಧುನಿಕ ವಚನ ಗೋಷ್ಠಿ ಮತ್ತು ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಗೋಷ್ಠಿಗಳು ನಡೆಯಲಿವೆ ಎಂದರು.

ಶರಣ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮಿ ಮತ್ತು ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಈ ಸಮ್ಮೇಳನದಲ್ಲಿ ‘ಅನುಭವ ಸಂಗಮ’ ಶೀರ್ಷಿಕೆಯ ಸ್ಮರಣ ಸಂಚಿಕೆಯನ್ನು ಸಚಿವ ಎಂ.ಬಿ.ಪಾಟೀಲ ಬಿಡುಗಡೆ ಮಾಡಲಿದ್ದು, ಡಾ.ಸಿದ್ಧರಾಮ ಬೆಲ್ದಾಳ ಶರಣರು ಸಮ್ಮೇಳನದ ಸರ್ವಾಧ್ಯಕ್ಷರಾಗಿರಲಿದ್ದಾರೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್, ಸಂಸದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ.ಸೋಮಣ್ಣ, ನಿವೃತ್ತ ನ್ಯಾಯಮೂರ್ತಿ ಡಾ.ಶಿವರಾಜ ವಿ.ಪಾಟೀಲ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು, ಕುಲಪತಿ ಡಾ.ಎಂ. ಪ್ರಭಾಕರ ಕೋರೆ ಸಹಿತ ಹಲವರು ಭಾಗವಹಿಸಲಿದ್ದಾರೆ ಎಂದು ಸೋಮಶೇಖರ ಮಾಹಿತಿ ನೀಡಿದರು.

Share This Article
Leave a comment

Leave a Reply

Your email address will not be published. Required fields are marked *