ಬೆಂಗಳೂರು
ಬಸವ ವೇದಿಕೆ ವತಿಯಿಂದ ನೀಡುವ ಪ್ರಶಸ್ತಿಗಳು ಘೋಷಣೆಯಾಗಿವೆ. ‘ಬಸವಶ್ರೀ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ, ‘ವಚನ ಸಾಹಿತ್ಯಶ್ರೀ ಪ್ರಶಸ್ತಿ’ಗೆ ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರ ಹಾಗೂ ‘ವಚನ ಸಂಗೀತ ಪ್ರಶಸ್ತಿ’ಗೆ ಗಾಯಕಿ ಎಂ.ಡಿ. ಪಲ್ಲವಿ ಅವರನ್ನು ಆಯ್ಕೆ ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಬಸವ ವೇದಿಕೆಯ ಅಧ್ಯಕ್ಷ ಸಿ. ಸೋಮಶೇಖರ್ ಅವರು ಈ ವಿಷಯ ತಿಳಿಸಿದರು.
‘ಮೇ 3ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದು, ಗೃಹ ಸಚಿವ ಜಿ. ಪರಮೇಶ್ವರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಸದ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸಚಿವ ಎಂ.ಬಿ. ಪಾಟೀಲ ಅವರು ಬಸವ ಜ್ಯೋತಿ ಮಾಹಿತಿ ಕೈಪಿಡಿ ಬಿಡುಗಡೆ ಮಾಡಲಿದ್ದಾರೆ’ ಎಂದು ಅವರು ಹೇಳಿದರು.