ಬಸವಣ್ಣನವರಿಗೆ ಅವಹೇಳನ ಖಂಡಿಸಿ ಬಣಜಿಗ ಸಮಾಜದಿಂದ ಮನವಿ ಸಲ್ಲಿಕೆ

ಬಸವ ಮೀಡಿಯಾ
ಬಸವ ಮೀಡಿಯಾ

ಹುಬ್ಬಳ್ಳಿ :

ಜಗಜ್ಯೋತಿ ಬಸವಣ್ಣನವರ ವ್ಯಕ್ತಿತ್ವ, ವಿಚಾರಧಾರೆ ಹಾಗೂ ಸಾಮಾಜಿಕ ಕ್ರಾಂತಿಯ ಆಶಯಗಳಿಗೆ ಧಕ್ಕೆ ತರುವಂತಹ ವಿವಾದಿತ ‘ಬಸವ ಮಂಟಪ’ ಕೃತಿಯಲ್ಲಿನ ಅಂಶಗಳನ್ನು ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕವು ತೀವ್ರವಾಗಿ ಖಂಡಿಸಿದೆ.

ಸಂಘದ ವತಿಯಿಂದ ಈಚೆಗೆ ಪ್ರತಿಭಟನೆ ನಡೆಸಿ, ಬಸವಣ್ಣನವರಿಗೆ ಅವಹೇಳನ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಹಾಗೂ ವಿವಾದಿತ ಕೃತಿಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ, ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.

ಬಸವಣ್ಣನವರು ವಿಶ್ವಮಾನವ ಸಂದೇಶ ಸಾರಿದ ಮಹಾನ್ ಶರಣರು. ಸಮಾನತೆ, ಕಾಯಕ, ದಾಸೋಹ ಮತ್ತು ಮಾನವೀಯ ಮೌಲ್ಯಗಳ ಮೂಲಕ ಸಮಾಜಕ್ಕೆ ಹೊಸ ದಿಕ್ಕು ತೋರಿದ ಮಹಾನ್ ಚೇತನ. ಇಂತಹ ಮಹಾನ್ ವ್ಯಕ್ತಿತ್ವದ ಕುರಿತು ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ವಿಚಾರಗಳನ್ನು ಪ್ರಕಟಿಸುವುದು ಸಮಾಜದ ಭಾವನೆಗಳಿಗೆ ನೋವುಂಟು ಮಾಡುವ ಕೃತ್ಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಿವಾದಿತ ಕೃತಿಯ ಲೇಖಕರು, ಪ್ರಕಾಶಕರು ಹಾಗೂ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಕೃತಿಯ ಕುರಿತು ಸೂಕ್ತ ತನಿಖೆ ನಡೆಸಬೇಕು ಮತ್ತು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಲು ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಬಸವಣ್ಣನವರ ಗೌರವ ಮತ್ತು ಬಸವತತ್ವಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಬಸವಣ್ಣನವರ ವಿಚಾರಧಾರೆಗಳಿಗೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಸಂಘದ ಕಾರ್ಯದರ್ಶಿ ಲಿಂಗರಾಜ ಧಾರವಾಡ ಈ ಸಂದರ್ಭದಲ್ಲಿ ಮಾತನಾಡಿ ಎಚ್ಚರಿಸಿದರು.

ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕ ಅಧ್ಯಕ್ಷರಾದ ಫಕೀರಪ್ಪ ಅಕ್ಕಿ, ಕಾರ್ಯದರ್ಶಿಗಳಾದ ಲಿಂಗರಾಜ ಧಾರವಾಡ ಶೆಟ್ಟರ, ಅಜ್ಜಪ್ಪ ಬೆಂಡಿಗೇರಿ, ಸಿದ್ದು ಅಂಕಲಕೋಟಿ, ನವೀನಕುಮಾರ ವಾಳ್ವಿ, ಜಗದೀಶ ಅಸುಂಡಿ, ಸಚಿನ್ ಹೊರಕೇರಿ, ನಿಂಗಣ್ಣ ಮುಗಳಿ, ಅನಿಲಕುಮಾರ ಧಾರವಾಡ, ಮಂಜುನಾಥ ಸಂಗೊಳ್ಳಿ, ಜಗದೀಶ ವಾಲಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಬಸವಾಭಿಮಾನಿಗಳು ಉಪಸ್ಥಿತರಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/LKx5yQpivBVC6opWuKbovh

Share This Article
Leave a comment

Leave a Reply

Your email address will not be published. Required fields are marked *