ರಾಜ್ಯಮಟ್ಟದ ಪೂರ್ವಭಾವಿ ಸಮಾಲೋಚನಾ ಸಭೆ
ಕಲಬುರಗಿ
ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಹಾಗೂ ಉದ್ಯಮಶೀಲತೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ‘ಬಸವಧಾಮ’ ಪ್ರಶಿಕ್ಷಣ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಕನ್ನೇರಿ ಸ್ವಾಮಿ ಹೇಳಿದರು.
ನಗರದ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ (ಕೆಕೆಸಿಸಿಐ) ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ‘ಬಸವಧಾಮ’ದ ಲೋಗೋ ಅನಾವರಣಗೊಳಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ತರಬೇತಿ ಒದಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಯುಪಿಎಸ್ಸಿ, ಕೆಪಿಎಸ್ಸಿ, ಬ್ಯಾಂಕಿಂಗ್, ಮಿಲಿಟರಿ ಹಾಗೂ ರೈಲ್ವೆ ಸೇರಿದಂತೆ ವಿವಿಧ ಕ್ಷೇತ್ರಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರವೇಶ ಪರೀಕ್ಷೆ ನಡೆಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅವರ ಆರ್ಥಿಕ ಸ್ಥಿತಿಗತಿಗೆ ಅನುಗುಣವಾಗಿ ವಾರ್ಷಿಕ ಕನಿಷ್ಠ 1 ರೂ. ನಿಂದ ತರಬೇತಿ ಶುಲ್ಕ ನಿಗದಿಪಡಿಸುವ ಉದ್ದೇಶವಿದೆ. ಈ ಮೂಲಕ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಗುಣಮಟ್ಟದ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಮೊದಲ ಹಂತದಲ್ಲಿ 1,000 ವಿದ್ಯಾರ್ಥಿಗಳಿಗೆ ಹಾಗೂ 1,000 ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕ್ಯಾಂಪಸ್ಗಳನ್ನು ನಿರ್ಮಿಸುವ ಯೋಜನೆಯಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ವಸತಿ, ಹಾಸ್ಟೆಲ್ ಹಾಗೂ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗುವುದು. ಆಧುನಿಕ ಶಿಕ್ಷಣ ಸೌಲಭ್ಯಗಳೊಂದಿಗೆ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಿಸಲಾಗುವುದು ಎಂದು ಹೇಳಿದರು.
ಕೇಂದ್ರದಲ್ಲಿ ಡಿಜಿಟಲ್ ಮತ್ತು ಭೌತಿಕ ಗ್ರಂಥಾಲಯಗಳು, ಲಕ್ಷಾಂತರ ಪ್ರಶ್ನೆಪತ್ರಿಕೆಗಳನ್ನು ಒಳಗೊಂಡ ಡಿಜಿಟಲ್ ಸರ್ವರ್ ವ್ಯವಸ್ಥೆ, ಕಂಪ್ಯೂಟರ್ ಲ್ಯಾಬ್ ಹಾಗೂ ಭಾಷಾ ಪ್ರಯೋಗಾಲಯಗಳನ್ನು ಸ್ಥಾಪಿಸುವ ಉದ್ದೇಶವಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಅಗತ್ಯವಾದ ಅಧ್ಯಯನ ಸಾಮಗ್ರಿ ಮತ್ತು ತಾಂತ್ರಿಕ ಸೌಲಭ್ಯಗಳು ಒಂದೇ ಸೂರಿನಡಿ ಲಭ್ಯವಾಗಲಿವೆ ಎಂದರು.
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಜೊತೆಗೆ ಯುವಕರಲ್ಲಿ ಉದ್ಯಮಶೀಲತೆಯನ್ನು ಬೆಳೆಸಲು ಸ್ಟಾರ್ಟ್ಅಪ್ ಮತ್ತು ಸ್ಟ್ಯಾಂಡ್ಅಪ್ ಯೋಜನೆಗಳ ಕುರಿತು ತರಬೇತಿ ನೀಡಲಾಗುವುದು. ದೇಶ-ವಿದೇಶಗಳ ಉದ್ಯಮಿಗಳೊಂದಿಗೆ ಸಂವಾದ ಏರ್ಪಡಿಸಿ, ಯುವಕರ ಕೌಶಲ್ಯ ಅಭಿವೃದ್ಧಿ ಹಾಗೂ ಸ್ವಾವಲಂಬನೆಗೆ ಉತ್ತೇಜನ ನೀಡಲಾಗುವುದು ಎಂದು ವಿವರಿಸಿದರು.
ಗುಜರಾತ್ನ ಸರ್ದಾರ್ ಧಾಮ ಮಾದರಿಯಲ್ಲಿ ‘ಬಸವಧಾಮ’ ಶಿಕ್ಷಣ ಕೇಂದ್ರವನ್ನು ಅಂದಾಜು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಮೊದಲ ಹಂತದಲ್ಲಿ ಹುಬ್ಬಳ್ಳಿ ಅಥವಾ ಬೆಳಗಾವಿ ಸಮೀಪ ಸೂಕ್ತ ಜಾಗ ಗುರುತಿಸಿ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ. ಮುಂದಿನ ಹಂತಗಳಲ್ಲಿ ರಾಜ್ಯದ 14 ಜಿಲ್ಲೆಗಳ ಸಹಕಾರದೊಂದಿಗೆ ಯೋಜನೆಯನ್ನು ವಿಸ್ತರಿಸಿ, ಹೆಚ್ಚಿನ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ತಲುಪಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಚಂದು ಪಾಟೀಲ, ಶಿವರಾಜ್ ನಿಂಗನಶೆಟ್ಟಿ, ಸಂತೋಷ್, ಶಶಿಕಾಂತ ಪಾಟೀಲ, ಬಸವರಾಜ್ ದಿಗ್ಗಾಂವಿ, ರಾಚನಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕೃಪೆ ವಾರ್ತಾ ಭಾರತಿ
