ಚಾಮರಾಜನಗರ :
12ನೇ ಶತಮಾನದ ಮಹಾನ್ ಮಾನವತಾವಾದಿ, ಸಮಾನತೆಯ ಹರಿಕಾರ, ವಚನ ಸಾಹಿತ್ಯದ ಮೂಲಕ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ವಿಶ್ವಗುರು ಬಸವಣ್ಣನವರ ಕುರಿತು ರವಿ ಹಂಜ್ ಎಂಬುವವರು ನೀಡಿರುವ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಲಾಗಿದೆ.
ಹಂಜ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಲಾಯಿತು.
ಬಸವಣ್ಣನವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಅವರು ಇಡೀ ಮಾನವಕುಲಕ್ಕೆ ಸಮಾನತೆ, ಕಾಯಕ, ದಾಸೋಹ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳ ಸಂದೇಶ ಸಾರಿದ ಮಹಾನ್ ಸಮಾಜ ಸುಧಾರಕರು. ಇಂತಹ ಮಹಾನ್ ವ್ಯಕ್ತಿತ್ವದ ಕುರಿತು ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಸಮಾಜದ ಶಾಂತಿ, ಸೌಹಾರ್ದತೆ ಮತ್ತು ಜನರ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಹೇಳಿಕೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ಲಭ್ಯವಿರುವ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸಲಾಯಿತು.
ಅಲ್ಲದೆ, ಸಮಾಜದಲ್ಲಿ ವೈಚಾರಿಕ ಭಿನ್ನಾಭಿಪ್ರಾಯಗಳಿಗೆ ಅವಕಾಶವಿದ್ದರೂ ಯಾವುದೇ ಮಹಾನ್ ವ್ಯಕ್ತಿಗಳ ಕುರಿತು ಉದ್ದೇಶಪೂರ್ವಕ ಅವಹೇಳನ, ದ್ವೇಷ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಬಸವಣ್ಣನವರ ವಿಚಾರಧಾರೆ ಮತ್ತು ಮಾನವೀಯ ಮೌಲ್ಯಗಳ ರಕ್ಷಣೆಗೆ ಸಂಘಟಿತವಾಗಿ ಶಾಂತಿಯುತ ಹಾಗೂ ಕಾನೂನುಬದ್ಧ ಹೋರಾಟ ಮುಂದುವರಿಸಲಾಗುವುದು ಎಂದು ಮಹಾಸಭೆಯ ಪದಾಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆಯ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ಬಸವ ಕೇಂದ್ರದ ಪ್ರಮುಖರು, ಬಸವ ಸಂಸ್ಕೃತಿ ಅಭಿಯಾನದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದು, ದೂರು ಸಲ್ಲಿಸುವ ಮೂಲಕ ನ್ಯಾಯಯುತ ಕ್ರಮಕ್ಕೆ ಆಗ್ರಹಿಸಿದರು.
