ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಬೀದರ್ನಿಂದ ಚಾಮರಾಜನಗರದವರೆಗೆ ಕರ್ನಾಟಕದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಚಾಲನೆ ನೀಡಿದರು.
2500 ಕಿ.ಮೀ. ಉದ್ದದ ಈ ವಿಶೇಷ ಮಾನವ ಸರಪಳಿಯನ್ನು ಪ್ರತಿ ಜಿಲ್ಲೆ, ತಾಲೂಕು ಹಾಗೂ ಪ್ರಮುಖ ಗ್ರಾಮಗಳಲ್ಲಿ ಹಾದು ಹೋಗುವ ಹೆದ್ದಾರಿಗಳಲ್ಲಿ ನಿರ್ಮಿಸಲಾಗಿತ್ತು. ಸಮಾಜದ ಎಲ್ಲಾ ವರ್ಗದ ಜನರೂ ಸೇರಿದಂತೆ ಸುಮಾರು 25 ಲಕ್ಷ ಮಂದಿ ಕೈಕೈ ಹಿಡಿದು ರಾಜ್ಯದುದ್ದಕ್ಕೂ ಮಾನವ ಸರಪಳಿ ನಿರ್ಮಿಸಿದರು, ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದೇ ವೇಳೆ ಸಂವಿಧಾನದ ಮಹತ್ವ ಸಾರುವ ಪ್ರಸ್ತಾವನೆ ಓದುವ ಸುತ್ತಮುತ್ತ ಪ್ರದೇಶದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳೂ ನಡೆದವು.
ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ರಾಜ್ಯ 32 ಇಲಾಖೆಗಳ ಸುಮಾರು 8 ಲಕ್ಷಕ್ಕೂ ಅಧಿಕ ಸಿಬ್ಬಂದಿ ಕಾರ್ಯಕ್ರಮಕ್ಕಾಗಿ ಶ್ರಮಿಸಿದರು.
ಈ ವಿನೂತನ ಮತ್ತು ಬೃಹತ್ ಕಾರ್ಯಕ್ರಮಕ್ಕೆ ಲಂಡನ್ ನ ವಿಶ್ವ ದಾಖಲೆ ಪರಿಶೀಲಿಸುವ ತಂಡ ಆಗಮಿಸಿದ್ದು, ಎಲ್ಲವೂ ದಾಖಲೆಗಳ ನಿಯಮದಂತಿರುವುದನ್ನು ವಿವಿಧ ಹಂತಗಳಲ್ಲಿ ಅಧ್ಯಯನ ಮಾಡುತ್ತಿದೆ. ದಾಖಲೆಗಳ ನಿಯಮಕ್ಕೆ ಒಪ್ಪುವಂತೆ ಇದ್ದರೆ ಕಾರ್ಯಕ್ರಮವನ್ನು ವಿಶ್ವ ದಾಖಲೆಗೆ ಸೇರಿಸಲಿದೆ.