ಬಸವಾದಿ ಶರಣರ ಹೆಸರಲ್ಲಿ ಎಂ.ಬಿ. ಪಾಟೀಲ ಪ್ರಮಾಣವಚನ

ಬಸವ ಮೀಡಿಯಾ
ಬಸವ ಮೀಡಿಯಾ

ವಿಜಯಪುರ

ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ್‌ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರಿನ ಲೋಕಭವನದಲ್ಲಿ ನಡೆದ ಪ್ರವಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಶ್ವಗುರು ಬಸವಣ್ಣ ಸೇರಿದಂತೆ ಬಸವಾದಿ ಶರಣರ ಹಾಗೂ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರಲ್ಲಿ ಎಂ.ಬಿ.ಪಾಟೀಲ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಳೆದ 32 ವರ್ಷಗಳಿಂದ ಕಟ್ಟಾ ಕಾಂಗ್ರೆಸ್ಸಿಗರಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿರುವ ಎಂ.ಬಿ.ಪಾಟೀಲ್‌ ಅವರು ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. ಎರಡು ಬಾರಿ ತಿಕೋಟಾ ಹಾಗೂ ನಾಲ್ಕು ಬಾರಿ ಬಬಲೇಶ್ವರ ಕ್ಷೇತ್ರದಿಂದ ಸೇರಿದಂತೆ ಒಟ್ಟು 6 ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ವಿಜಯಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ.

2004ರಲ್ಲಿ ತಿಕೋಟಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾದರು. ಕ್ಷೇತ್ರ ಪುನರ್ ವಿಂಗಡನೆಯ ನಂತರ 2008ರಲ್ಲಿ ಬಬಲೇಶ್ವರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. 2013ರಲ್ಲಿ ಬಬಲೇಶ್ವರ ಕ್ಷೇತ್ರದಿಂದ ಶಾಸಕರಾಗಿ ಪುನರ್‌ ಆಯ್ಕೆಯಾದ ಅವರು ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ 5 ವರ್ಷಗಳ ಕಾಲ ಜಲಸಂಪನ್ಮೂಲ ಸಚಿವರಾಗಿ, ನೀರಾವರಿ ಇಲಾಖೆಗೆ ಕಾಯಕಲ್ಪ ಒದಗಿಸಿದ್ದಾರೆ.

2018ರಲ್ಲಿ ಬಬಲೇಶ್ವರ ಕ್ಷೇತ್ರದಿಂದ ಪುನರಾಯ್ಕೆಯಾದ ನಂತರ ಸಮ್ಮಿಶ್ರ ಸರ್ಕಾರದಲ್ಲಿ ಎಂ. ಬಿ. ಪಾಟೀಲ ಅವರು ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

2022 ಫೆಬ್ರುವರಿಯಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡು, ಕರ್ನಾಟಕದಾದ್ಯಂತ ಸಂಚರಿಸಿ, ಪಕ್ಷವನ್ನು ಸಂಘಟಿಸಿ, 2023 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ.

2023ರಲ್ಲಿ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ 2026 ರವರೆಗೆ ಕಾರ್ಯನಿರ್ವಹಿಸಿದ್ದಾರೆ. ಇದೀಗ ಡಿ.ಕೆ.ಶಿವಕುಮಾರ್‌ ನೇತೃತ್ವದ ಸಚಿವ ಸಂಪುಟದಲ್ಲಿ ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/Ky8rMVgQct2AZDAbXDYq2U

Share This Article
Leave a comment

Leave a Reply

Your email address will not be published. Required fields are marked *