ಮುರುಘಾ ಶರಣರ ಪ್ರಕರಣ: ಮೊದಲನೇ ಪೋಕ್ಸೊ ಕೇಸಿಗೆ ನವೆಂಬರ್ 26 ತೀರ್ಪು

ಬಸವ ಮೀಡಿಯಾ
ಬಸವ ಮೀಡಿಯಾ

ಚಿತ್ರದುರ್ಗ

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೊ ಪ್ರಕರಣದ ವಿಚಾರಣೆ ಮಂಗಳವಾರ ಪೂರ್ಣಗೊಂಡಿದ್ದು, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರಪ್ಪ ಹಡಪದ ನ.26ಕ್ಕೆ ಆದೇಶ ಕಾಯ್ದಿರಿಸಿದ್ದಾರೆ.

ಶರಣರ ವಿರುದ್ಧದ 2 ಪೋಕ್ಸೊ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಸಂಬಂಧ ಸುದೀರ್ಘ ವಿಚಾರಣೆ ನಡೆದಿದೆ. ಮಂಗಳವಾರ ನಡೆದ ವಿಚಾರಣೆ ವೇಳೆ ಸರ್ಕಾರಿ ವಕೀಲ ಜಗದೀಶ್‌ ಸಂತ್ರಸ್ತೆಯ ಪರ ಅಂತಿಮ ವಾದ ಮಂಡಿಸಿದರು. ಈ ಪ್ರಕರಣಗಳಲ್ಲಿ ಶರಣರು ಪ್ರಸ್ತುತ ಷರತ್ತುಬದ್ಧ ಜಾಮೀನು ಪಡೆದಿದ್ದಾರೆ.

ಪ್ರಕರಣದ ಮುಖ್ಯ ಘಟನೆಗಳು

ಆಗಸ್ಟ್ 26, 2022

ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಸಿದ್ದರು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ಆರೋಪಿಗಳಾಗಿದ್ದರು.

ಆಗಸ್ಟ್ 27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಯಿತು.

ಸೆಪ್ಟೆಂಬರ್ 1, 2022

ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಬಂಧನಕ್ಕೊಳಗಾಗಿದ್ದರು.

ಅಕ್ಟೊಬರ್ 13, 2022

ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಆ ಕೇಸಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಎಂದು ಅವರು ಉಲ್ಲೇಖಿಸಿದ್ದರು

ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ, ಎ6 ಮುರುಘಾಶ್ರೀ ಸಹಾಯಕ ಮಹಾಲಿಂಗ, ಎ7 ಅಡುಗೆಭಟ್ಟ ಕರಿಬಸಪ್ಪ ಮುಖ್ಯ ಆರೋಪಿಗಳಾಗಿದ್ದರು.

ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಹಾಗೂ ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡವು 2022ರ ಅ.27 ರಂದು 694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದರಲ್ಲಿ ಎ ಮತ್ತು ಬಿ ಎಂದು ಎರಡು ಸೆಟ್ ಚಾರ್ಜ್ ಶೀಟ್ ಸಲ್ಲಿಸಿದ್ದರು.

2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 761 ಪುಟಗಳ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದರು. ಇಷ್ಟೆಲ್ಲ ಸಾಕ್ಷ್ಯಾಧಾರ ಹಾಗೂ ಚಾರ್ಜ್‌ಶೀಟ್‌ ಮೇಲೆ ಚಿತ್ರದುರ್ಗ ನ್ಯಾಯಾಲಯ ವಿಚಾರಣೆ ನಡೆಸಿತ್ತು.

ನವೆಂಬರ್ 8, 2023

ವಿಚಾರಣೆ ನಡಯುವಾಗಲೇ ನವೆಂಬರ್ 8 ರಂದು ಹೈಕೋರ್ಟ್ ನಿಂದ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ನವೆಂಬರ್ 16ರಂದು ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದರು.

2ನೇ ಪೋಕ್ಸೋ ಕೇಸಿನಲ್ಲಿ ಜಾಮೀನು ಪಡೆಯದ ಹಿನ್ನೆಲೆಯಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹಿನ್ನೆಲೆ ಪುನಃ ನವೆಂಬರ್ 20ರಂದು ಮಧ್ಯಾಹ್ನ ಮುರುಘಾಶ್ರೀ ಮತ್ತೆ ಬಂಧನಕ್ಕೊಳಗಾದರು. ಬಳಿಕ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಆದರೆ ನವೆಂಬರ್ 20 ಸಂಜೆ ವೇಳೆಗೆ ಹೈಕೋರ್ಟ್ ಸೂಚನೆ ಮೇರೆಗೆ ಅಂದೇ ಬಿಡುಗಡೆ ಭಾಗ್ಯ ಸಿಕ್ಕಿತ್ತು.

ಆಗ ಸಂತ್ರಸ್ತೆಯರು ಮುರುಘಾಶ್ರೀಗಳ ಜಾಮೀನು ರದ್ದತಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಮುಖ್ಯ ಸಾಕ್ಷ ವಿಚಾರಣೆ ಪೂರ್ಣ ಆಗುವವರೆಗೆ ಮುರುಘಾಶ್ರೀ ಬಂಧನದಲ್ಲಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಮಾಡಿತ್ತು.

ಮೇ.27, 2024

ಕೋರ್ಟ್ ಎದುರು ಶರಣಾದ ಮುರುಘಾಶ್ರೀಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿತ್ತು.

ಅಕ್ಟೊಬರ್ 7, 2024

ಬಳಿಕ ಸಂತ್ರಸ್ತೆಯರಿಬ್ಬರು ಸೇರಿದಂತೆ 13 ಜನರ ಸಾಕ್ಷ ವಿಚಾರಣೆ ಅಂತ್ಯವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನಿನ ಮೇಲೆ ಚಿತ್ರದುರ್ಗ ಜೈಲಿನಿಂದ ಬಿಡುಗಡೆ. ಪ್ರಕರಣದಲ್ಲಿ ಮುರುಘಾ ಶ್ರೀ ಒಟ್ಟು 2 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದರು.

ಬಿಡುಗಡೆ ಬಳಿಕ ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಮುರುಘಾಶ್ರೀ ಇರುವಂತಿಲ್ಲ ಎಂಬ ಷರತ್ತಿನ ಕಾರಣ ದಾವಣಗೆರೆಯ ಶಿವಯೋಗಿ ಮಂದಿರಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಿದರು.

ನವೆಂಬರ್ 18, 2025

ಮೊದಲನೇ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಮುಗಿದು ಅಂತಿಮ ತೀರ್ಪು ಕಾಯ್ದಿರಿಸಲಾಗಿದೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/JjqqFwfw2jf2WxG5glPZ0O

Share This Article
Leave a comment

Leave a Reply

Your email address will not be published. Required fields are marked *