ಬೆಂಗಳೂರು
ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದ ಘಟನೆಯನ್ನು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ.
‘ಬೆಳಗಾವಿಯ ಸುವರ್ಣಸೌಧದ ಮುಂದೆ 2024ರ ಡಿಸೆಂಬರ್ 10ರಂದು ನಡೆದಿರುವ ಲಾಠಿ ಪ್ರಹಾರ ನಡೆದ ಘಟನೆಯನ್ನು ತನಿಖಾ ಆಯೋಗಕ್ಕೆ ವಹಿಸಲು ಆದೇಶಿಸಬೇಕು’ ಎಂದು ಕೋರಿ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಮಾನ್ಯ ಮಾಡಿ ಆದೇಶಿಸಿದೆ.
‘ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಬೇಕು. ಆಯೋಗವು ಕಾಲಮಿತಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು’ ಎಂದು ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಪಂಚಮಸಾಲಿ ಹೋರಾಟಗಾರರ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದಿಸಿದರು. ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟಿಸುವಾಗ ಪೊಲೀಸರು ದುರುದ್ದೇಶದಿಂದ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಆರೋಪಿಸಿದರು.