ಬೆಂಗಳೂರು
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ, ಸಮುದಾಯದ ಸಚಿವರು, ಪ್ರಮುಖರು ಹಾಗೂ ಜನಪ್ರತಿನಿಧಿಗಳೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಶಿವರಾಜ್ ತಂಗಡಗಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ವಿನಯ್ ಕುಲಕರ್ಣಿ, ವಿಜಯಾನಂದ ಕಾಶ್ಯಪ್ಪನವರ್, ಕೂಡಲ ಸಂಗಮ ಗುರುಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಪಸ್ಥಿತರಿದ್ದರು.
ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗ ಮನವಿ ಮಾಡಿತು.
ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು.
ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟವಾಗಿ ತಿಳಿಸಿದರು.
ಹಿಂದಿನ ಸರ್ಕಾರ ನಿಮ್ಮ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದರು.
ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸಿಎಂ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಸವ ಜಯಮೃತ್ಯುಂಜಯ ಶ್ರೀ, ಚಳಿಗಾಲದ ಅಧಿವೇಶನಕ್ಕೂ ಮುನ್ನ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೇ ಡಿಸೆಂಬರ್ 9ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಗೂ ಟ್ರಾಕ್ಟರ್ ರ್ಯಾಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಗೆ ಮುನ್ನವೇ ಮುನ್ನವೇ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ಇಲ್ಲದಿದ್ರೆ ನಮ್ಮ ಹೋರಾಟ ಮುಂದುವರಿಯಲಿದೆ. ಸುವರ್ಣಸೌಧ ಗೇಟ್ ಮುಂದೆ ನಮ್ಮ ಟ್ರ್ಯಾಕ್ಟರ್ ನಿಲ್ಲಲಿವೆ ಎಂದು ಸ್ಪಷ್ಟಪಡಿಸಿದರು.
ನಮ್ಮ ಯಾವುದೇ ಬೇಡಿಕೆಗೆ ಸಮಯ ನಿಗದಿ ಮಾಡಿಲ್ಲ. ಬೇಡಿಕೆಗೆ ಯಾವುದೇ ಸಕಾರಾತ್ಮಕವಾಗಿ ಉತ್ತರ ನೀಡಿಲ್ಲ. ಚರ್ಚೆ ಚೆನ್ನಾಗಿಯೇ ಆಗಿತ್ತು, ಎರಡೂ ತಾಸು ಸಭೆ ನಡೆಸಿದರು. ಆದ್ರೆ ನಾವು ಅಂದುಕೊಂಡ ಹಾಗೆ ಸಮಯ ನಿಗದಿ ಮಾಡಲಿಲ್ಲ. ಕಳೆದ ಬಿಜೆಪಿ ಸರ್ಕಾರ ಇದ್ದಾಗಲೇ ಸಾಕಷ್ಟು ಹೋರಾಟ ಮಾಡಿದ್ವಿ. ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಇದ್ದಾಗ ಹೋರಾಟ ನಡೀತು. ಈಗ ಅದೇ ರೀತಿ ಈಗಲೂ ಮಾಡುತ್ತಿದ್ದೇವೆ. ಆದ್ರೆ ನಮ್ಮ ಬೇಡಿಕೆ ಯಾವುದೇ ರೀತಿ ಸ್ಪಂದಿಸಿಲ್ಲ. ಹೀಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.