ಬೆಂಗಳೂರು
ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರಿಂದ ₹2 ಕೋಟಿ ಸುಲಿಗೆ ನಡೆಸಿದ್ದ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಸವೇಶ್ವರನಗರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಅಥಣಿಯ ಎಂಜಿನಿಯರ್ ಸೋಮಶೇಖರ್ ನಾಯಕ್ ಹಾಗೂ ಬಸವೇಶ್ವರನಗರದ ನಿವಾಸಿ ವಿಜಯಕುಮಾರಿ ಬಂಧಿತರು.
‘ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಹಾಗೂ ಮತ್ತೊಬ್ಬ ಆರೋಪಿ ಅಜಯ್ ಜೋಶಿ ತಲೆಮರೆಸಿಕೊಂಡಿದ್ದು, ಶೋಧ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಗೋಪಾಲ ಜೋಶಿ ಅವರ ಕುಟುಂಬದ ಸ್ನೇಹಿತೆ ವಿಜಯಕುಮಾರಿ ಅವರ ಮನೆಯಲ್ಲಿ ಶೋಧ ನಡೆಸಲಾಗಿದ್ದು, ಕೆಲವು ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಗೋಪಾಲ ಜೋಶಿ ಅವರಿಗೆ ಸೇರಿದ ಕೆಲವು ಸ್ಥಳಗಳಲ್ಲೂ ಪರಿಶೀಲನೆ ನಡೆಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತ ಗೃಹ ಸಚಿವ ಪರಮೇಶ್ವರ ದೂರು ಬಂದಾಗ ಗಂಭೀರವಾಗಿ ತೆಗೆದುಕೊಳ್ಳಬೇಕಲ್ಲವೇ? ಗೋಪಾಲ್ ಜೋಷಿ ಎಂಬುವರು ತಲೆಮರೆಸಿಕೊಂಡಿದ್ದು ತನಿಖೆ ಮುಂದುವರಿದಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ. ಈ ಪ್ರಕರಣದಲ್ಲಿ ಪ್ರಹ್ಲಾದ್ ಜೋಷಿ ಅವರ ಪಾತ್ರ ಇರುವುದು ನನಗೆ ಗೊತ್ತಿಲ್ಲ. ಬಂಧಿತರನ್ನು ವಿಚಾರಣೆ ನಡೆಸಿ, ಹೇಳಿಕೆ ಪಡೆದಾಗ ಯಾರಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು.
ಗೋಪಾಲ್ ಜೋಶಿ ಸಂಪರ್ಕವಿಲ್ಲ: ಜೋಶಿ ಸ್ಪಷ್ಟನೆ
ಕೇಸ್ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಹ್ಲಾದ್ ಜೋಶಿ, ಗೋಪಾಲ್ ಜೋಶಿ ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ. ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಅಂತ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ನನಗೆ ಯಾರೂ ಸಹೋದರಿ ಇಲ್ಲ. ವಿಜಯಲಕ್ಷ್ಮಿ ಯಾರೆಂಬುದೇ ಗೊತ್ತಿಲ್ಲ. ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು ಇದ್ದೀವಿ ಅಂತ ಪ್ರಹ್ಲಾದ್ ಜೋಶಿ ಹೇಳಿದ್ದಾರೆ
ನನ್ನ ಹೆಸರು ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ನನಗೂ, ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಸಂಬಂಧವಿಲ್ಲ ಅಂತ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಗೋಪಾಲ್ ಜೋಶಿ ಹಣ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಇದು ತನಿಖೆಯಿಂದ ಸಾಬೀತಾಗಬೇಕಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಬೌದ್ಧಿಕ ದಿವಾಳಿತನ ಪ್ರದರ್ಶನ ಮಾಡುತ್ತಿದೆ . ನನ್ನನ್ನು ಬಂಧಿಸಬೇಕೆನ್ನುವ ಮೂಲಕ ಕಾಂಗ್ರೆಸ್ ಮುಠ್ಠಾಳತನ ತೋರುತ್ತಿದೆ. ಸತ್ಯಾಸತ್ಯತೆ ವಿಮರ್ಶೆ ಮಾಡದೆ ಹುಂಬತನ ಪ್ರದರ್ಶಿಸುತ್ತಿದೆ ಅಂತ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.