ಜಿಲ್ಲಾಡಳಿತ ಕಚೇರಿಯಲ್ಲಿ ಬಸವೇಶ್ವರರ ಕಂಚಿನ ಪ್ರತಿಮೆ ಅನಾವರಣ

ಬಸವ ಮೀಡಿಯಾ
ಬಸವ ಮೀಡಿಯಾ

ಸಮಾನತೆ, ಹಕ್ಕುಗಳಿಗಾಗಿ ಬಸವಣ್ಣ ಕಲ್ಯಾಣದ ಕ್ರಾಂತಿ ನಡೆಸಿದರು: ಖಂಡ್ರೆ

ದೇವನಹಳ್ಳಿ:

ಜಗತ್ತಿನಲ್ಲಿ ಹೆಣ್ಣಿಗಾಗಿ, ಹೊನ್ನಿಗಾಗಿ, ಮಣ್ಣಿಗಾಗಿ ಅನೇಕ ಕ್ರಾಂತಿಗಳು ನಡೆದಿವೆ. ಆದರೆ ಸರ್ವಜನರ ಸಮಾನತೆ ಮತ್ತು ಹಕ್ಕುಗಳಿಗಾಗಿ ನಡೆಸಿದ್ದು ಬಸವಣ್ಣನವರ ಕಲ್ಯಾಣದ ಕ್ರಾಂತಿ ಮಾತ್ರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬಸವೇಶ್ವರ ಪ್ರತಿಮೆ ನಿರ್ಮಾಣ ಸಮಿತಿ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ಜಗಜ್ಯೋತಿ ಬಸವೇಶ್ವರ ಅವರ ಕಂಚಿನ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶರಣರ ವಚನಗಳು ಸಾರ್ವಕಾಲಿಕವಾಗಿದ್ದು, ಬಸವಣ್ಣನವರ ತತ್ವಾದರ್ಶಗಳು  ಜಗತ್ಪ್ರಸಿದ್ಧವಾಗಿವೆ. ಅವರ ತತ್ವಗಳ ಪ್ರಚಾರ ಹಾಗೂ ಪ್ರಸಾರ ಇಂದಿನ ಸಮಾಜಕ್ಕೆ ಅಗತ್ಯವಾಗಿದೆ ಎಂದರು.

ಮನುಷ್ಯರನ್ನು ಮನುಷ್ಯರಂತೆ ಕಾಣದ ಅನಕ್ಷರತೆ, ಮೌಢ್ಯತೆ ಹೆಚ್ಚಾಗಿತ್ತು, ಹೆಣ್ಣಿಗೆ ಸಮಾನತೆ ಇರಲಿಲ್ಲ. 12ನೇ ಶತಮಾನದ ಅಂತಹ ಕಾಲಘಟ್ಟದಲ್ಲಿ ಸಮಾನತೆ, ಸ್ವಾತಂತ್ರ್ಯ, ಕಾಯಕ, ದಾಸೋಹ, ಸಹೋದರತ್ವ ಮತ್ತು ಸಹಬಾಳ್ವೆಯ ತಳಹದಿಯ ಮೇಲೆ ಬಲಿಷ್ಠ ಹಾಗೂ ಸುಂದರ ಸಮಾಜ ನಿರ್ಮಾಣಕ್ಕೆ ಬಸವಣ್ಣನವರ ನೇತೃತ್ವದಲ್ಲಿ ವೈಚಾರಿಕ ಮತ್ತು ವೈಜ್ಞಾನಿಕ ತಳಹದಿಯ ಕ್ರಾಂತಿ ನಡೆಯಿತು. ಶ್ರೇಣಿಕೃತರಹಿತ, ವರ್ಗರಹಿತ, ಲಿಂಗಭೇದರಹಿತ ಸಮಸಮಾಜ ನಿರ್ಮಾಣಕ್ಕೆ ಬಸವಣ್ಣನವರು ಶ್ರಮಿಸಿದ್ದಾರೆ ಎಂದರು.

ಅನುಭವ ಮಂಟಪಕ್ಕೆ ₹280 ಕೋಟಿ:

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳಿನ ಕಲ್ಪನೆ ನೀಡಿ, ಜಗತ್ತಿನ ಪ್ರಪ್ರಥಮ ಸಂಸತ್ತಾದ ಅನುಭವ ಮಂಟಪವನ್ನು ಸ್ಥಾಪಿಸಿದರು. ಅಲ್ಲಿ 770ಕ್ಕೂ ಹೆಚ್ಚು ವಿವಿಧ ವೃತ್ತಿ ಹಾಗೂ ಸಮುದಾಯಗಳ ಅಮರಗಣಂಗಳು ಪಾಲ್ಗೊಂಡು ವಚನಗಳನ್ನು ರಚಿಸಿದರು. ಪ್ರಜಾಪ್ರಭುತ್ವದ ಪರಿಕಲ್ಪನೆಗೆ ತಳಹದಿಯಾದ ಆಧುನಿಕ ಅನುಭವ ಮಂಟಪವು ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿದ್ದು, ಇತ್ತೀಚೆಗೆ ಅನುಭವ ಮಂಟಪ ಕಾಮಗಾರಿಗೆ ₹105 ಕೋಟಿ ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು ₹280 ಕೋಟಿ ಬಿಡುಗಡೆ ಮಾಡಲಾಗಿದೆ. ಮುಂದಿನ ವರ್ಷದೊಳಗೆ ಲೋಕಾರ್ಪಣೆ ಮಾಡುವ ಉದ್ದೇಶವಿದ್ದು, ಪ್ರಸ್ತುತ ಕಾಮಗಾರಿ ಭರದಿಂದ ಸಾಗುತ್ತಿದೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ ಆವರಣದಲ್ಲಿ ಸ್ಥಾಪಿಸಿರುವ ಜಗಜ್ಯೋತಿ ಬಸವೇಶ್ವರರ ಕಂಚಿನ ಪ್ರತಿಮೆಯನ್ನು ಸಚಿವ ಈಶ್ವರ ಖಂಡ್ರೆ ಮತ್ತು ಇತರೆಲ್ಲರೂ ಸೇರಿ ಲೋಕಾರ್ಪಣೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡುತ್ತ, ಬುದ್ಧ, ಬಸವಣ್ಣ, ಮಹಾತ್ಮ ಗಾಂಧಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ತಿಳಿದು ಆ ದಾರಿಯಲ್ಲಿ ನಡೆಯುತ್ತಿದ್ದೇನೆ ಎಂದರು. ಬಸವಣ್ಣನವರ ಚಿಂತನೆಗಳನ್ನು ಚಿಕ್ಕ ವಯಸ್ಸಿನಲ್ಲೇ ಮೈಗೂಡಿಸಿಕೊಂಡಿದ್ದೇನೆ ಎಂದು ನುಡಿದರು.

ಬಸವಣ್ಣನವರು “ಕಾಯಕವೇ ಕೈಲಾಸ” ಎಂದು ಸಾರಿದರು. ಸಮಾನತೆ, ಕಾಯಕ ಮತ್ತು ದಾಸೋಹದ ಸಂದೇಶವನ್ನು ನೀಡಿದ ಮಹಾನ್ ದಾರ್ಶನಿಕ ಬಸವಣ್ಣ, ಅವರ ಆದರ್ಶಗಳು ನಮ್ಮ ಸಮಾಜಕ್ಕೆ ಸದಾ ದಾರಿದೀಪವಾಗಿವೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಡಾ. ಕೆ. ಸುಧಾಕರ್ ಮಾತನಾಡಿದರು.

ಬಸವಣ್ಣನವರು ವಚನಗಳನ್ನು ಬರೆಯುವುದಷ್ಟೇ ಅಲ್ಲ, ಅವುಗಳನ್ನು ಜೀವನದಲ್ಲಿ ಆಚರಿಸಿದರು. ಅವರ ಆದರ್ಶಗಳನ್ನು ನಾವು ಪಾಲಿಸಬೇಕು. ಪ್ರತಿದಿನದ ಕೆಲಸದಲ್ಲಿ ಬಸವಣ್ಣನವರನ್ನು ಕಾಣಬೇಕು ಮತ್ತು ದಾಸೋಹ ತತ್ವವು ಇಂದು ತ್ರಿವಿಧ ರೂಪಗಳಲ್ಲಿ—ಶಿಕ್ಷಣ, ಆರೋಗ್ಯ ಮತ್ತು ಅನ್ನದಾಸೋಹಗಳಾಗಿ ರಾಜ್ಯದಲ್ಲಿ ಪ್ರಾಮುಖ್ಯತೆ ಪಡೆದಿದೆ ಎಂದರು.

ಜಿಲ್ಲಾಡಳಿತ ಭವನ ಆವರಣದಲ್ಲಿ ಲೋಕಾರ್ಪಣೆಗೊಂಡ ಬಸವಣ್ಣನವರ ಪ್ರತಿಮೆಯ ಮಂಟಪ 28 ಅಡಿ ಎತ್ತರವಾಗಿದ್ದು, ಕಂಚಿನ ಪ್ರತಿಮೆ 5 ಅಡಿ ಎತ್ತರ ಹೊಂದಿದೆ. 450 ಕೆಜಿ ಕಂಚು ಬಳಸಿ ಸುಮಾರು ₹80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಸಮಾರಂಭದಲ್ಲಿ ಸುತ್ತೂರು ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಪೂಜ್ಯ ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ, ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿ, ಐದನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ ಮತ್ತು ಇತರರು ಭಾಗವಹಿಸಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/FjCpFjdZ7HXLwuA2LCEhga

Share This Article
Leave a comment

Leave a Reply

Your email address will not be published. Required fields are marked *