ಸಾಣೇಹಳ್ಳಿ:
ನವೆಂಬರ್ 2 ರಿಂದ 7 ರವರೆಗೆ ಸಾಣೇಹಳ್ಳಿಯಲ್ಲಿ ನಡೆಯಲಿರುವ ರಾಷ್ಟ್ರೀಯ ನಾಟಕೋತ್ಸವದ ಆಹ್ವಾನ ಪತ್ರಿಕೆಯನ್ನು ಶನಿವಾರ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪೂಜ್ಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳವರು, ಈ ಕಾರ್ಯಕ್ರಮದಲ್ಲಿ ಮಠಾಧೀಶರು, ಸಾಹಿತಿಗಳು, ಚಿಂತಕರು, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿದಿನ ಸಂಜೆ ವೇದಿಕೆಯ ಕಾರ್ಯಕ್ರಮದಲ್ಲಿ ಒಂದೊಂದು ವಿಷಯ ಕುರಿತಂತೆ ಚಿಂತಕರು ತಮ್ಮ ಚಿಂತನೆಯನ್ನು ಹಂಚಿಕೊಳ್ಳುತ್ತಾರೆ
ಶಿವಸಂಚಾರದ ಕಲಾವಿದರು ವಚನಗೀತೆಗಳನ್ನು ಪ್ರಸ್ತುತ ಪಡಿಸುತ್ತಾರೆ. ಶಾಲಾ ವಿದ್ಯಾರ್ಥಿಗಳು ವಚನ ನೃತ್ಯ ಮಾಡಲಿದ್ದು. ಶಿವಸಂಚಾರ – 25 ರ ನಾಟಕಗಳು ಜಂಗಮದೆಡೆಗೆ, ಕಳ್ಳರ ಸಂತೆ, ಶಿವಯೋಗಿ ಸಿದ್ಧರಾಮೇಶ್ವರ ನಾಟಕ ಪ್ರದರ್ಶನ ನಡೆಯುವುದು.
7ರಂದು ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಭಾಗವಹಿಸಲಿದ್ದು. ರಂಗಭೂಮಿಯ ಮತ್ತು ಚಲನಚಿತ್ರ ಕಲಾವಿದೆ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಶಿವಕುಮಾರ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಪ್ರತಿದಿನ ಬೆಳಿಗ್ಗೆ ಇಷ್ಟಲಿಂಗ ದೀಕ್ಷೆ ಹಾಗೂ ಚಿಂತನಾ ಕಾರ್ಯಕ್ರಮ ನಡೆಯಲಿದ್ದು 5 ರಂದು ಬೆಳಗ್ಗೆ 10 ಗಂಟೆಗೆ ಸಾವಯವ ಕೃಷಿಗೆ ಸಂಬಂಧಿಸಿದಂತೆ ವಿಚಾರ ಸಂಕಿರಣ, ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ ನಡೆಯುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೊಸದುರ್ಗ ಕ್ಷೇತ್ರದ ಶಿಕ್ಷಣಾಧಿಕಾರಿ ಸೈಯದ್ ಮೋಸಿನ್, ಮುಖ್ಯೋಪಾಧ್ಯಾಯರಾದ ಬಸವರಾಜ್, ಶಿವಕುಮಾರ್, ಸ್ಕೌಟ್ ಗೈಡ್ ಸಂಚಾಲಕ ಯೋಗರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
